​ತುಂಗಭದ್ರಾ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿದ್ದ ಮೂವರು ಯುವಕರು ನಾಪತ್ತೆ: ಎಸ್‌ಡಿಆರ್‌ಎಫ್ ತಂಡದಿಂದ ಶೋಧ ಕಾರ್ಯ.

Spread the love

ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ.

(ಹಗರಿಬೊಮ್ಮನಹಳ್ಳಿ) : ಮೀನು ಹಿಡಿಯಲು ತುಂಗಭದ್ರಾ ನದಿಯ ಹಿನ್ನೀರಿಗೆ ತೆರಳಿದ್ದ ಮೂವರು ಯುವಕರು ನಾಪತ್ತೆಯಾಗಿರುವ ಆತಂಕಕಾರಿ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ.

​ನಾಪತ್ತೆಯಾದ ಯುವಕರನ್ನು ರಾಜು (27), ಯಮನೂರ್ (24) ಹಾಗೂ ಅಜ್ಜಪ್ಪ (30) ಎಂದು ಗುರುತಿಸಲಾಗಿದೆ.

​ಘಟನೆಯ ವಿವರ:

​ಕಾಣೆಯಾದ ಮೂವರು ಯುವಕರು ನಿನ್ನೆ ಮಧ್ಯಾಹ್ನ ತಂಬ್ರಳ್ಳಿ ಸಮೀಪದ ತುಂಗಭದ್ರಾ ಹಿನ್ನೀರಿನ ಪ್ರದೇಶಕ್ಕೆ ಮೀನು ಹಿಡಿಯಲು ತೆರಳಿದ್ದರು. ಆದರೆ, ರಾತ್ರಿಯಾದರೂ ಮನೆಗೆ ಹಿಂತಿರುಗದ ಕಾರಣ ಆತಂಕಗೊಂಡ ಕುಟುಂಬಸ್ಥರು ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಯುವಕರ ಸುಳಿವು ಸಿಗದ ಹಿನ್ನೆಲೆಯಲ್ಲಿ ಕೊನೆಗೆ ಪೊಲೀಸರಿಗೆ ದೂರು ನೀಡಿದ್ದಾರೆ.

​ಸ್ಥಳದಲ್ಲೇ ಬೀಡುಬಿಟ್ಟ ಪೊಲೀಸರು, ತೀವ್ರ ಶೋಧ:

​ಮಾಹಿತಿ ತಿಳಿಯುತ್ತಿದ್ದಂತೆಯೇ ಹಗರಿಬೊಮ್ಮನಹಳ್ಳಿ ಹಾಗೂ ತಂಬ್ರಳ್ಳಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಸ್ಥಳೀಯರ ನೆರವಿನೊಂದಿಗೆ ನದಿ ಪಾತ್ರದಲ್ಲಿ ಶೋಧ ಕಾರ್ಯ ಆರಂಭಿಸಿದ್ದಾರೆ. ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ, ನದಿಯಲ್ಲಿ ಪರಿಣಾಮಕಾರಿಯಾಗಿ ಹುಡುಕಾಟ ನಡೆಸಲು ರಾಜ್ಯ ವಿಪತ್ತು ಸ್ಪಂದನಾ ಪಡೆ (SDRF) ತಂಡವನ್ನು ಸ್ಥಳಕ್ಕೆ ಕರೆಸಲಾಗಿದೆ. ಶೋಧ ಕಾರ್ಯದಲ್ಲಿ ಯಮನೂರು ಎಂಬ ಯುವಕನ ಮೃತದೇಹ ಪತ್ತೆಯಾಗಿದೆ. ಇನ್ನಿಬ್ಬರ ಹುಡುಕಾಟ ನಡೆಸಲಾಗಿದೆ.

​ಪ್ರಸ್ತುತ ಹಗರಿಬೊಮ್ಮನಹಳ್ಳಿ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ನಾಪತ್ತೆಯಾದವರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಘಟನೆಗೆ ಸಂಬಂಧಿಸಿದಂತೆ ತಂಬ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *